ಚಿತ್ರದುರ್ಗ: ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಳವಾದಂತೆ ಅಪರಾಧ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆ ಬಲಪಡಿಸಲು ಎಲ್ಲ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಶನಿವಾರ ಪೊಲೀಸ್ ಇಲಾಖೆ ವತಿಯಿಂದ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸ್ವತ್ತನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮ ಮತ್ತು ಪೊಲೀಸ್ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 139 ಪ್ರಕರಣಗಳಲ್ಲಿ ಒಟ್ಟು 2.13 ಕೋಟಿ ರೂ. ಬೆಲೆ ಬಾಳುವ ಚಿನ್ನಾಭರಣ, ವಾಹನ, ನಗದು, ಮೊಬೈಲ್ ಫೋನ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೀಗೆ ವಶಪಡಿಸಿಕೊಂಡ ವಸ್ತುಗಳನ್ನು ಸಂಬಂಧಿಸಿದ ವಾರಸುದಾರರಿಗೆ ಹಿಂದಿರುಗಿಸುತ್ತಿರುವುದು ವಿಶೇಷ ಸಂದರ್ಭವಾಗಿದೆ. ಇದಕ್ಕೆ ಶ್ರಮಿಸಿದ ಜಿಲ್ಲೆಯ ಎಲ್ಲಾ ಪೊಲೀಸ್ ಸಿಬ್ಬಂದಿ ಅಭಿನಂದನೆಗೆ ಅರ್ಹರು. ಪೊಲೀಸರು ಇನ್ನೂ ಹೆಚ್ಚಿನ ಶ್ರಮ ತೆಗೆದುಕೊಂಡು ಅಪರಾಧಗಳನ್ನು ತಡೆಯಲು ಪ್ರಯತ್ನಿಸಬೇಕು. ಅಪರಾಧಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಕೂಡ ಅಷ್ಟೇ ಮುಖ್ಯವಾಗಿದೆ ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ ಒಟ್ಟು ರೂ.5.27 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಈ ಪೈಕಿ 2.13 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಸಂಬಂಧಿಸಿದ ವಾರಸುದಾರರಿಗೆ ಇಂದು ಮರಳಿಸಲಾಗುತ್ತಿದೆ. ಇದರೊಂದಿಗೆ ಪೊಲೀಸ್ ಜಾಗೃತಿ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳನ್ನು ಅವಲೋಕಿಸಿದಾಗ ಇದರಲ್ಲಿ ಸಾಕಷ್ಟು ಪ್ರಕರಣಗಳನ್ನು ತಡೆಗಟ್ಟಬಹುದಿತ್ತು. ಈ ಕುರಿತು ಮಹಿಳಾ ಪೊಲೀಸ್, ಸಂಚಾರಿ ಪೊಲೀಸ್ ಹಾಗೂ ಸೈಬರ್ ಪೊಲೀಸ್ ಠಾಣೆ ವತಿಯಿಂದ ಮಹಿಳೆಯರ ರಕ್ಷಣೆ, ಆಸ್ತಿ ವಿವಾದ, ಅಪಘಾತ, ಪೋಕ್ಸೋ, ಕಳವು ಮುಂತಾದ ಪ್ರಕರಣಗಳ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಸ್ತು ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗಿದೆ. ಸಶಸ್ತ್ರ ಮೀಸಲು ಪಡೆಯ ವತಿಯಿಂದ ಆಯುಧಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಚಿತ್ರದುರ್ಗ ಡಿವೈಎಸ್‍ಪಿ ದಿನಕರ್, ಚಳ್ಳಕೆರೆ ಡಿವೈಎಸ್‍ಪಿ ರಾಜಣ್ಣ, ಹಿರಿಯೂರು ಡಿವೈಎಸ್‍ಪಿ ಶಿವಕುಮಾರ್, ಚಿತ್ರದುರ್ಗದ ಸೈಬರ್ ಅಪರಾಧ ತಡೆ ಪೊಲೀಸ್ ಠಾಣೆ ಡಿವೈಎಸ್‍ಪಿ ಓಂಕಾರನಾಯಕ್ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವೃತ್ತ ನಿರೀಕ್ಷಕರು, ಸಬ್ ಇನ್ಸ್‍ಪೆಕ್ಟರ್‍ಗಳು ಭಾಗವಹಿಸಿದ್ದರು.