ಲಕ್ನೋ : ಗುಡಂಬಾ ಪ್ರದೇಶದ ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಐದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಡಂಬಾದ ಬೆಹ್ತಾ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಪಕ್ಕದ ಮನೆಗಳಿಗೂ ಹಾನಿಯಾಗಿದೆ. ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಐದು ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಐವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸಲು ತಕ್ಷಣವೇ ಸ್ಥಳಕ್ಕೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.