ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 19ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೀದರ್ ಜಿಲ್ಲೆ ಔರಾದ್ ತಾಲೂಕು: ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಅಂಗನವಾಡಿ, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆ: ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ರಜೆ ಘೋಷಣೆ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ: ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ತಾಲೂಕು, ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ ಹೋಬಳಿ, ವಸ್ತಾರೆ, ಆವತಿ ಹೋಬಳಿ, ತರೀಕೆರೆ, ಲಕ್ಕವಳ್ಳಿ, ಲಿಂಗದಹಳ್ಳಿ ಹೋಬಳಿಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಕೊಡಗು: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲೆಯ ಅಂಗನವಾಡಿ, ಶಾಲೆಗಳು, ಕಾಲೇಜುಗಳಿಗೆ ಆ.19ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ: ಬೆಳಗಾವಿ ಜಿಲ್ಲೆಯ 7 ತಾಲೂಕಿನಲ್ಲಿನ ಅಂಗನವಾಡಿ ಕೇಂದ್ರ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ ತಾಲೂಕಿನಲ್ಲಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಧಾರವಾಡ: ಧಾರವಾಡ ಜಿಲ್ಲೆಯಲ್ಲಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ಈ ರಜೆಯನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ಹೊಂದಾಣಿಕೆ ಮಾಡಲು ಸೂಚನೆ ನೀಡಿದ್ದಾರೆ.
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ 11 ತಾಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಯಲ್ಲಾಪುರ, ಜೋಯಿಡಾ, ಹಳಿಯಾಳ, ಸಿದ್ದಾಪುರ ಹಾಗೂ ಭಟ್ಕಳ, ದಾಂಡೇಲಿ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ. ಮುಂಜಾಗ್ರತೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ, ಅರಕಲಗೂಡು, ಬೇಲೂರು, ಆಲೂರು ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.’