ಬೆಂಗಳೂರು : ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ಚಿಂತಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ನೀಡಿರುವ ಅವರು, ‘ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪರಿವರ್ತನಾತ್ಮಕ ಆರ್ಥಿಕ ಸುಧಾರಣೆಗಳ ಮೂಲಕ ಅವರ ಪರಂಪರೆ ಜೀವಂತವಾಗಿದೆ. ಅವರ ಕೊಡುಗೆಗಳನ್ನು ಗೌರವಿಸಲು, ಅವರ ದೂರದೃಷ್ಟಿಯ ನೀತಿಗಳನ್ನು ಅಧ್ಯಯನ ಮಾಡಲು, ಭಾರತದ ಭವಿಷ್ಯವನ್ನು ರೂಪಿಸಲು ಹಾಗೂ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ನಾವು ಚಿಂತಿಸುತ್ತಿದ್ದೇವೆ ಎಂದರು.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಉನ್ನತ ಶಿಕ್ಷಣ ಸಚಿವ ಎಂ .ಸಿ. ಸುಧಾಕರ್ ಅವರಿಗೆ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ.