ಚಿತ್ರದುರ್ಗ: ಕೇಂದ್ರ ಸರ್ಕಾರ 2023-24ನೇ ಸಾಲಿನ ಆಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಅನುದಾನ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ತ್ವರಿತವಾಗಿ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಅನುಷ್ಠಾನ ಮಾಡಲು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅನುದಾನ ಬಿಡುಗಡೆಗೆ ಕೋರಿ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಯವರ ಗಮನ ಸೆಳೆಯುವ ಸೂಚನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲಿಖತ ಉತ್ತರ ನೀಡಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯನ್ನು ಮಧ್ಯ ಕರ್ನಾಟಕದ ಬರಪೀಡಿತ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿನ 2,25,515 ಹೆಕ್ಟೇರ್ (5,57,022 ಎಕರೆ) ಭೂ ಪ್ರದೇಶಕ್ಕೆ, 29.90 ಟಿ.ಎಂ.ಸಿ ನೀರಿನ ಬಳಕೆಯೊಂದಿಗೆ ಸೂಕ್ಷ್ಮ ನೀರಾವರಿ ಪದ್ಧತಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ 367 ಕೆರೆಗಳಿಗೆ ಅವುಗಳ ಸಾಮಥ್ರ್ಯದ ಶೇ.50 ರಷ್ಟು ನೀರನ್ನು ತುಂಬಿಸಲು ಉದ್ದೇಶಿಸಿ ರೂಪಿಸಲಾಗಿರುತ್ತದೆ. ರೂ.21,473.67 ಕೋಟಿ ಮೊತ್ತದ ಪರಿಷ್ಕøತ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಯೋಜನೆಗಾಗಿ 2025-26ನೇ ಸಾಲಿನಲ್ಲಿ ರೂ.1,440.29 ಕೋಟಿ ಅನುದಾನ ಹಂಚಿಕೆಯಾಗಿದ್ದು, ನವೆಂಬರ್-2025 ಅಂತ್ಯಕ್ಕೆ ರೂ.597.92 ಕೋಟಿ ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ. ಕೇಂದ್ರ ಸರ್ಕಾರದ ಹಣಕಾಸಿನ ನೆರವು ದೊರೆತಲ್ಲಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬಹುದಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಯೋಜನೆಯ ಪ್ರಥಮ ಹಂತದಲ್ಲಿ ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ 17.40 ಟಿ.ಎಂ.ಸಿ. ನೀರನ್ನು ಲಿಫ್ಟ್ ಮಾಡುವ ರೂ.324 ಕೋಟಿಗಳ ಮೊತ್ತದ (ಪ್ಯಾಕೇಜ್-1) ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.
ಭದ್ರಾ ಜಲಾಶಯದಿಂದ ಅಜ್ಜಂಪುರ ಸುರಂಗದವರೆಗೆ 29.90 ಟಿ.ಎಂ.ಸಿ. ನೀರನ್ನು ಲಿಫ್ಟ್ ಮಾಡುವ ರೂ.1,032 ಕೋಟಿಗಳ ಮೊತ್ತದ (ಪ್ಯಾಕೇಜ್-2) ಮತ್ತು ಅಜ್ಜಂಪುರ ಸುರಂಗ ನಿರ್ಮಾಣ ಮಾಡುವ ರೂ.223.96 ಕೋಟಿಗಳ ಮೊತ್ತದ (ಪ್ಯಾಕೇಜ್-3) ಕಾಮಗಾರಿಗಳು ಪೂರ್ಣಗೊಂಡಿರುತ್ತವೆ. ಭದ್ರಾ ಜಲಾಶಯದಿಂದ ಅಜ್ಜಂಪುರ ಸುರಂಗದ ಮೂಲಕ 2019-2020ನೇ ಸಾಲಿನಿಂದ ವಾಣಿ ವಿಲಾಸ ಸಾಗರಕ್ಕೆ ನೀರನ್ನು ಹರಿಸಲಾಗಿರುತ್ತದೆ.
ಎರಡನೆ ಹಂತದಲ್ಲಿ ತರೀಕೆರೆ ಏತ ನೀರಾವರಿ, ಚಿತ್ರದುರ್ಗ ಹಾಗೂ ತುಮಕೂರು ಶಾಖಾ ಕಾಲುವೆ ಕಾಮಗಾರಿಗಳ ಮೂಲಕ ಸೂಕ್ಷ್ಮ ನೀರಾವರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರೊಂದಿಗೆ ಜಗಳೂರು ಶಾಖಾ ಕಾಲುವೆ, ಹೊಳಲ್ಕೆರೆ, ಚಳ್ಳಕೆರೆ, ಮೊಳಕಾಲ್ಮರು, ಪಾವಗಡ, ಚಿಕ್ಕನಾಯಕನಹಳ್ಳಿ ಹಾಗೂ ಶಿರಾ ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುತ್ತವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.

































