ಬೆಳಗಾವಿ : ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಸಂಭ್ರಮಾಚರಣೆ ಮಾಡುವ ಮೂಲಕ ಗೂಂಡಾಗಿರಿ ತೋರಿದ ಗ್ರಾಮ ಪಂಚಾಯಿತಿ ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಬಾಬಾಜಾನ್ ಖಾಲಿಮುಂಡಾಸೈ ಗೂಂಡಾವರ್ತನೆ ತೋರಿದ ಗ್ರಾಮ ಪಂಚಾಯಿತಿ ಸದಸ್ಯ ಎಂದು ಹೇಳಲಾಗಿದೆ. ಈ ಕುರಿತಾಗಿ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯನನ್ನು ಬಂಧಿಸಿದ್ದಾರೆ.
ಹುಟ್ಟುಹಬ್ಬ ಆಚರಿಸಿಕೊಂಡ ಬಾಬಾಜಾನ್ ಖಾಲಿಮುಂಡಾಸೈ, ಕೈಯಲ್ಲಿ ಚಾಕು ಹಿಡಿದು ನಡುರಸ್ತೆಯಲ್ಲೇ ಸಂಭ್ರಮಾಚರಣೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಅಪ್ಲೋಡ್ ಮಾಡಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಬಾಜಾನ್ರನ್ನು ಪೊಲೀಸರು ಬಂಧಿಸಿದ್ದಾರೆ.
				
															
                    
                    
                    
                    
                    
































