ಬೆಂಗಳೂರು : ಸಂವಿಧಾನವಿರೋಧಿ ಧೋರಣೆ ಹೊಂದಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಕ್ಷಣವೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಆಗ್ರಹಿಸಿದ್ದಾರೆ.
‘ಸಂವಿಧಾನ ಬದಲಾಯಿಸಿ ಮುಸ್ಲಿಮರಿಗೆ ಮೀಸಲಾತಿ ನೀಡುತ್ತೇನೆ’ ಎಂಬ ಡಿ.ಕೆ ಶಿವಕುಮಾರ್ ರವರ ಹೇಳಿಕೆಯ ವಿರುದ್ಧ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಪ್ರತಿಭಟನೆಯು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಯಾವತ್ತೂ ಸಂವಿಧಾನದ ಪರ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರರ ಪರ ಇಲ್ಲ ಎಂದು ಆಕ್ಷೇಪಿಸಿದರು. ಅವರು ಮಾತನಾಡಿದ್ದು ಸಂವಿಧಾನ ವಿರೋಧಿ ಮಾತುಗಳು ಎಂದು ಟೀಕಿಸಿದರು.ಸಿದ್ದರಾಮಯ್ಯನವರು ಈಗ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
ಡಿ.ಕೆ.ಶಿವಕುಮಾರ್ ಅವರಿಗೆ ಸಂವಿಧಾನದ ಬಗ್ಗೆ ಸ್ವಲ್ಪವಾದರೂ ಗೌರವ ಇದ್ದಲ್ಲಿ, ಪ್ರಜಾಪ್ರಭುತ್ವದ ಬಗ್ಗೆ ಗೌರವ ಇದ್ದಲ್ಲಿ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ಅಲ್ಲದೇ ಅವರು ದೇಶದ ಜನತೆಯ ಕ್ಷಮೆ ಕೇಳಬೇಕು ಎಂದರು.ಇದನ್ನು ಒಂದು ಜನಾಂದೋಲನವಾಗಿ ರೂಪಿಸಲು ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹನದ ಮೂಲಕ ಇವತ್ತು ಸಾಂಕೇತಿಕವಾಗಿ ಶುರು ಮಾಡಿದ್ದೇವೆ. ಇದು ನಾಳೆಯಿಂದ ಇಡೀ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಪ್ರಕಟಿಸಿದರು.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮಾತನಾಡಿ, ಸಿದ್ದರಾಮಯ್ಯನವರ ಸಚಿವ ಸಂಪುಟದ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅತ್ಯಂತ ಆಘಾತಕಾರಿ ಹೇಳಿಕೆ ಕೊಟ್ಟಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಸಂವಿಧಾನ ತಿದ್ದುಪಡಿ ಮಾಡುವುದಾಗಿ ಹೇಳಿದ್ದಲ್ಲ; ಸಂವಿಧಾನ ಬದಲಿಸುವುದಾಗಿ ಹೇಳಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರು ಈ ಕೂಡಲೇ ಡಿ.ಕೆ.ಶಿವಕುಮಾರ್ ಅವರನ್ನು ಸಚಿವಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
				
															
                    
                    
                    































