ಕೊಡಗು- ಕಾಸರಗೋಡು : ಫೆಂಗಲ್ ಚಂಡಮಾರುತದ ಪರಿಣಾಮ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕೊಡಗು ನಾಳೆ ಬೆಳಿಗ್ಗೆ 8.30 ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ ಹೊರತು ಪಡಿಸಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಅದರಂತೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಕಾಸರಗೋಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಾಸರಗೋಡಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ( ಡಿ.3) ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಡಿ.ಸಿ ಕೆ ಇಂಬುಶೇಖರ್ ಆದೇಶ ಹೊರಡಿಸಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿಯೂ ಅತಿಯಾದ ಚಳಿ, ಶೀತಗಾಳಿ ಬೀಸುತ್ತಿದ್ದು, ಸಾರ್ವಜನಿಕರು ಬೆಚ್ಚಗಿನ ಉಡುಪುಗಳನ್ನು ಧರಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅವಶ್ಯವಿದ್ದರಷ್ಟೇ ಮನೆಯಿಂದ ಹೊರ ಹೋಗಬೇಕು ಎಂದು ಸೂಚನೆ ನೀಡಲಾಗಿದೆ.