ಚಿತ್ರದುರ್ಗ: ಜಿಲ್ಲೆಯಲ್ಲಿನ ವಸತಿನಿಲಯಗಳು, ಆಸ್ಪತ್ರೆ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಶೌಚಾಲಯ ಮತ್ತು ನೀರು ನಿರ್ವಹಣೆ ಕುರಿತು ಚರ್ಚಿಸಲು ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಆಸ್ಪತ್ರೆ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿರುವ ಶೌಚಾಲಯಗಳು ಸಣ್ಣಪುಟ್ಟ ದುರಸ್ಥಿಗಳಿದ್ದರೆ ಲಭ್ಯವಿರುವ ಅನುದಾನ ಬಳಸಿಕೊಂಡು ಅವುಗಳನ್ನು ಬಳಕೆಗೆ ಯೋಗ್ಯ ರೀತಿಯಲ್ಲಿ ಪರಿವರ್ತಿಸಬೇಕು ಎಂದು ಸೂಚಿಸಿದರು.
ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರವಾಗಿ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ವಿಶ್ವ ಶೌಚಾಲಯ ದಿನ ಆಚರಿಸಲಾಗುತ್ತಿದೆ. ನ.19 ರಿಂದ ಡಿ.20ರ ವರೆಗೆ ಜಿಲ್ಲೆಯಾದ್ಯಂತ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಹಮ್ಮಿಕೊಳ್ಳಲಾಗಿದೆ. ಅಂದದ ಶೌಚಾಲಯ-ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಆಂದೋಲನ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ಈ ದಿನಾಚರಣೆಯು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ತಿಳಿಸಿದ ಅವರು, ಗ್ರಾಮ ಪಂಚಾಯಿತಿ ಹಂತದಲ್ಲಿ ಸ್ವಚ್ಛ, ಸುಂದರ ವೈಯಕ್ತಿಕ ಗೃಹ ಶೌಚಾಲಯ (ಉತ್ತಮ ಶೌಚಾಲಯ)ಸ್ಪರ್ಧೆಯನ್ನು ಆಯೋಜಿಸಬೇಕು. ಅದೇ ರೀತಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಸಮುದಾಯ ಶೌಚಾಲಯ ಸ್ಪರ್ಧೆಗಳನ್ನು ಆಯೋಜಿಸಬೇಕು. ತದನಂತರ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ವಿಜೇರಿಗೆ ಪುರಸ್ಕಾರಗಳನ್ನು ನೀಡಿ ಗೌರವಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.