ಮೈಸೂರು : ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮಹತ್ವದ ದಿನವೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲಿಸಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯುವ ಮೂಲಕ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ರಚಿಸಿದ್ದಾರೆ. ಜನವರಿ 6ರಿಂದ ಸಿದ್ದರಾಮಯ್ಯ ಅವರು ರಾಜ್ಯವನ್ನು ಅತಿ ಹೆಚ್ಚು ದಿನಗಳ ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಇದುವರೆಗೆ ಈ ದಾಖಲೆ ದೇವರಾಜ ಅರಸು ಅವರ ಹೆಸರಿನಲ್ಲಿತ್ತು. ಅರಸು ಅವರು ಎರಡು ಅವಧಿಯಲ್ಲಿ ಒಟ್ಟು 2,789 ದಿನಗಳು, ಅಂದರೆ 7 ವರ್ಷ 239 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಕೂಡ 7 ವರ್ಷ 239 ದಿನಗಳ ಆಡಳಿತಾವಧಿಯನ್ನು ಪೂರ್ಣಗೊಳಿಸುವ ಮೂಲಕ ಆ ದಾಖಲೆಯನ್ನು ಸರಿಸಮನಾಗಿ ಮುರಿದು, ಹೊಸ ಅಧ್ಯಾಯ ಬರೆದಿದ್ದಾರೆ. ಇದರಿಂದ ಅವರು ‘ದಾಖಲೆ ರಾಮಯ್ಯ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸಿದ್ದರಾಮಯ್ಯ ಅವರು 2013ರಲ್ಲಿ ಮೊದಲ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ್ದರು. 2013ರಿಂದ 2018ರವರೆಗೆ ಪೂರ್ಣ ಐದು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ಸ್ಥಿರ ಆಡಳಿತವನ್ನು ನೀಡಿದ್ದರು. ಬಳಿಕ 2018ರ ವಿಧಾನಸಭೆ ಚುನಾವಣೆ ಫಲಿತಾಂಶ ಅತಂತ್ರವಾಗಿದ್ದು, ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ ಆ ಸರ್ಕಾರ ಕೇವಲ 14 ತಿಂಗಳಲ್ಲೇ ಪತನವಾಯಿತು. ನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಕ್ರಮವಾಗಿ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿದ್ದು, ಮೇ 20, 2023ರಂದು ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದೀಗ ಎರಡನೇ ಅವಧಿಯ ಆಡಳಿತದೊಂದಿಗೆ ಅವರು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಅತಿ ದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರಿಸಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರ ರಾಜಕೀಯ ಪಯಣವೂ ಗಮನಾರ್ಹವಾಗಿದೆ. ಲೋಕದಳದಿಂದ ರಾಜಕೀಯ ಜೀವನ ಆರಂಭಿಸಿದ ಅವರು, ಜನತಾದಳದ ಮೂಲಕ ಜನಪ್ರಿಯ ನಾಯಕನಾಗಿ ಹೊರಹೊಮ್ಮಿದರು. ನಂತರ ಜೆಡಿಎಸ್ ಪಕ್ಷ ತೊರೆದು 2006ರಲ್ಲಿ ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ಪಕ್ಷದಲ್ಲಿ ಸಂಘಟನಾತ್ಮಕವಾಗಿ ದುಡಿದು, ಬಲಿಷ್ಠ ನಾಯಕನಾಗಿ ಬೆಳೆದ ಸಿದ್ದರಾಮಯ್ಯ ಇಂದು ಎರಡು ಬಾರಿ ಮುಖ್ಯಮಂತ್ರಿ ಆಗುವ ಮೂಲಕ ರಾಜ್ಯ ರಾಜಕೀಯದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ.
ಮುಖ್ಯಮಂತ್ರಿ ಸ್ಥಾನದಲ್ಲಷ್ಟೇ ಅಲ್ಲ, ಬಜೆಟ್ ಮಂಡನೆಯಲ್ಲೂ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಇದುವರೆಗೂ ಅವರು ಒಟ್ಟು 16 ಬಾರಿ ರಾಜ್ಯ ಬಜೆಟ್ ಮಂಡಿಸಿದ್ದು, ಕರ್ನಾಟಕದ ಇತಿಹಾಸದಲ್ಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆ ಅವರ ಹೆಸರಿನಲ್ಲಿದೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ರಾಮಕೃಷ್ಣ ಹೆಗಡೆ ಇದ್ದು, ಅವರು 13 ಬಜೆಟ್ ಮಂಡಿಸಿದ್ದರು.
ದೇವರಾಜ ಅರಸು ನಂತರ ಎಸ್. ನಿಜಲಿಂಗಪ್ಪ (7 ವರ್ಷ 175 ದಿನಗಳು), ರಾಮಕೃಷ್ಣ ಹೆಗಡೆ (5 ವರ್ಷ 216 ದಿನಗಳು), ಬಿ.ಎಸ್. ಯಡಿಯೂರಪ್ಪ (5 ವರ್ಷ 82 ದಿನಗಳು) ಪ್ರಮುಖರಾಗಿದ್ದರು. ಇದೀಗ ಈ ಎಲ್ಲರನ್ನೂ ಹಿಂದಿಕ್ಕಿ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ರಾಜಕೀಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

































