ಬೆಳಗಾವಿ: ಮುಖ್ಯಮಂತ್ರಿಗಳ ಅನುಮೋದನೆ ಇಲ್ಲದೇ ಯಾವುದೇ ಇಲಾಖೆಯಲ್ಲೂ ವರ್ಗಾವಣೆ ಮಾಡುವಂತಿಲ್ಲ ಎಂದು ಸಿಎಂ ಕಚೇರಿಯಿಂದ ತಿಳಿಸಲಾಗಿದೆ. ಈ ಕುರಿತು ಅಧಿಕೃತವಾಗಿ ಸುತ್ತೋಲೆ ಸಹ ಹೊರಡಿಸಲಾಗಿದ್ದು, ಎಲ್ಲಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳಿಗೆ ಸೂಚನೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಟಿಪ್ಪಣಿ ಹೊರಡಿಸಿದ್ದಾರೆ.
ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಅನುಮತಿ ಇಲ್ಲದೆ, ಯಾವುದೇ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು. ಮುಖ್ಯಮಂತ್ರಿಗಳ ಗಮನಕ್ಕೆ ತರದೇ ವರ್ಗಾವಣೆ ಆದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ. ವರ್ಗಾವಣೆ ಅವಧಿ ಮುಗಿದಿದ್ದರು ಕೆಲ ಇಲಾಖೆಗಳಲ್ಲಿ ವರ್ಗಾವಣೆ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.