“ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ನಮ್ಮ ಸೈನಿಕರು ದಾಳಿ ನಡೆಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತಮ್ಮ ಕಾವೇರಿ ನಿವಾಸದಲ್ಲಿಂದು ಹಣೆಗೆ ಕುಂಕುಮವಿಟ್ಟು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಲಾಗಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ” ಎಂದರು.
ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ-ಸಿಎಂ: “ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು-ನೋವು ತಪ್ಪಿಸಿದ್ದಾರೆ. ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ 26 ಜನರ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುದು ಸ್ಪಷ್ಟವಾಗಿದೆ. ಉಗ್ರರ ದಾಳಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವತ್ತೂ ಪಾಕಿಸ್ತಾನ ಖಂಡಿಸುವ ಕೆಲಸ ಮಾಡಿಲ್ಲ. ನಾನೂ ಕೂಡ ಸರ್ಕಾರದ ಪರವಾಗಿ ಬೆಂಬಲ ಘೋಷಿಸುತ್ತೇನೆ. ನಾವೆಲ್ಲರೂ ಕೂಡ ಎಚ್ಚರವಹಿಸುವ ಕೆಲಸ ಮಾಡುತ್ತೇವೆ” ಎಂದು ಹೇಳಿದರು.
ರಾಯಚೂರು ಜಿಲ್ಲಾ ಪ್ರವಾಸ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯನವರು ತಮ್ಮ ನಿವಾಸದಲ್ಲಿ ಹಣೆಗೆ ಕುಂಕುಮವಿಟ್ಟು ತುರ್ತು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.