ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಿನ್ನೆಯೇ (ಏಪ್ರಿಲ್ 02) ದೆಹಲಿಗೆ ತೆರಳಿದ್ದಾರೆ.
138 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನವನ್ನು ಸಿಎಂ ನಿನ್ನೆ ಉದ್ಘಾಟಿಸಿದರು. ಇಂದು ಕೂಡ ದೆಹಲಿಯಲ್ಲೇ ಬೀಡು ಬಿಟ್ಟಿರುವ ಸಿದ್ದರಾಮಯ್ಯ, ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಅನೇಕ ವಿಚಾರಗಳ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ದೆಹಲಿಯಲ್ಲಿ ಇಂದು ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಹಲವು ಮಹತ್ವದ ವಿಚಾರಗಳ ಕುರಿತಾಗಿ ಮಾತುಕತೆ ನಡೆಸಿದೆ ಎಂದು ಬರೆದುಕೊಂಡಿದ್ದಾರೆ.
ಸಿಎಂ ಮತ್ತು ಡಿಸಿಎಂ ದೆಹಲಿ ಭೇಟಿಯ ನಡುವೆಯೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸ್ಥಾನ ಬದಲಾಣೆಯ ಕೂಗು ಆಗಾಗ ಕೇಳಿಬರುತ್ತಿದ್ದು, ಇದರ ನಡುವೆಯೇ ದೆಹಲಿಗೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಉಭಯ ನಾಯಕರ ಪಕ್ಷದ ಹಿರಿಯ ನಾಯಕರ ಪ್ರತ್ಯೇಕವಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಇನ್ನು ಇದೇ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಇದರೊಂದಿಗೆ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿಯ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ.