ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಭಾನುವಾರ ಮಾತನಾಡಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು, ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ.
ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಈ ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ.
ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ಎಲ್ಲೆಲ್ಲಿ ನಾಯಕರ ಮಧ್ಯೆ ಹೊಂದಾಣಿಕೆ ಸಾಧಿಸಿ, 50% ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.