ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ದೇವೇಂದ್ರ ಫಡ್ನವಿಸ್ ಮತ್ತೊಮ್ಮೆ ಸಿಎಂ ಪಟ್ಟಕ್ಕೆ ಏರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದ ಈ ಅದ್ಧೂರಿ ಸಮಾರಂಭದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿದರು.
ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ದೇವೇಂದ್ರ ಫಡ್ನವಿಸ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಮೂರನೇ ಬಾರಿಗೆ ಸಿಎಂ ಸ್ಥಾನ ಅಲಂಕರಿಸಿದ ದೇವೇಂದ್ರ ಫಡ್ನವೀಸ್ ಇಬ್ಬರು ಉಪಮುಖ್ಯಮಂತ್ರಿಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು. ಎನ್ಸಿಪಿ ನಾಯಕ ಅಜಿತ್ ಪವಾರ್ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಇಂದು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಫಡ್ನವಿಸ್ ಮತ್ತು ಅವರ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ಇಂದು ಮುಂಬೈನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ 42,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಪ್ರಧಾನಿ ಮೋದಿಯವರಲ್ಲದೆ, ಹಲವಾರು ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ವಿವಿಧ ರಾಜ್ಯಗಳ ಉಪ ಮುಖ್ಯಮಂತ್ರಿಗಳು ಮತ್ತು ಬಾಲಿವುಡ್ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.