ಮೈಸೂರು :ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇದೇ ವೇಳೆ ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ನಗರ ಪ್ರದೇಶದ ಮತದಾರರಲ್ಲಿ ಕಾಂಗ್ರೆಸ್ ಪರವಾದ ಒಲವು ಕಡಿಮೆ ಆಗುತ್ತಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮೈಸೂರು ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಳಿನ ಕಾರ್ಯಕ್ರಮ ಯಾರದೇ ಶಕ್ತಿ ಪ್ರದರ್ಶನದ ಕಾರ್ಯಕ್ರಮವಲ್ಲ. ಅದು ಅಭಿವೃದ್ಧಿಯ ಕಾರ್ಯಕ್ರಮ ಎಂದರು.
ಕೃಷ್ಣಾ ನದಿಹಂಚಿಕೆ- ಕೇಂದ್ರವಿನ್ನೂ ಅಧಿಸೂಚನೆ ಹೊರಡಿಸಿಲ್ಲ
ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಕೃಷ್ಣಾನದಿ ನೀರು ಹಂಚಿಕೆ ಬಗ್ಗೆ ಕೇಂದ್ರ ಇದುವರೆಗೂ ಅಧಿಸೂಚನೆಯನ್ನು ಹೊರಡಿಸಿಲ್ಲದಿರುವುದು ರಾಜ್ಯದ ಮೇಲೆ ಒತ್ತಡ ಹೇರಿದಂತಾಗಿದೆಯೇ ಬಗ್ಗೆ ಪ್ರತಿಕ್ರಿಯೆ ನೀಡಿ, ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಆದರೆ ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಅಧಿಸೂಚನೆ ಹೊರಡಿಸಿಲ್ಲ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ನಡುವೆ ಅಂತರ ರಾಜ್ಯ ಜಲವಿವಾದವಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆಯ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ ಮತ್ತು ತೀರ್ಪಿನನ್ವಯ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವುದೇ ನಷ್ಟವೂ ಆಗುವುದಿಲ್ಲ. ಆಲಮಟ್ಟಿ ಜಲಾಶಯದ ಎತ್ತರವನ್ನು 524.26 ಮೀ ಗಳಿಗೆ ಹೆಚ್ಚಿಸಲು ಅನುಮತಿ ನೀಡಿದ್ದಾರೆ ಎಂದರು.
ಕಾಲ್ತುಳಿತ ಪ್ರಕರಣ ವರದಿ-ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ
ಆರ್ ಸಿ ಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಆಯೋಗದ ವರದಿಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, . ಮುಂದಿನ ಸಚಿವ ಸಂಪುಟದಲ್ಲಿ ತನಿಖಾ ವರದಿಯ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದರು.
ಶಾಲೆಗಳಿಗೆ ಬಾಂಬ್ ಕರೆ-ಪೊಲೀಸರಿಗೆ ತನಿಖೆ ನಡೆಸಲು ಸೂಚನೆ
ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಹುಸಿ ಬಾಂಬ್ ಕರೆಯಿರಬಹುದೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು. ಸುಳ್ಳು ಹೇಳಿ ಅಪಪ್ರಚಾರ , ಪ್ರಚೋದನೆಗೊಳಿಸುವ ಕೃತ್ಯಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಕಾನೂನು ರೂಪಿಸಲಾಗುತ್ತಿದೆ ಎಂದರು.
 
				 
         
         
         
															 
                     
                     
                     
                     
                    


































 
    
    
        