ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್ ರಾಜಣ್ಣ ದೂರು ಕೊಟ್ಟರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜಣ್ಣ ದೂರು ಕೊಡುವುದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ನಾನು ಸಿಎಂ ಜೊತೆ ಉನ್ನತ ಮಟ್ಟದ ತನಿಖೆ ಬಗ್ಗೆ ಚರ್ಚೆ ಮಾಡುತ್ತೇನೆ. ಚರ್ಚೆ ಮಾಡಿದ ಬಳಿಕ ಪ್ರಕಟಿಸುತ್ತೇವೆ ಎಂದು ಹೇಳಿದ್ದಾರೆ.
ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂಬ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ನಾವು ನಮ್ಮದೇ ರೀತಿಯಲ್ಲಿ ಪರಿಶೀಲಿಸಿ ನಿರ್ಧಾರ ಮಾಡುತ್ತೇವೆ. ಇಷ್ಟು ದೊಡ್ಡ ಘಟನೆ ನಡೆದಿದೆ, ವಿಧಾನಸೌಧದಲ್ಲಿ ಚರ್ಚೆ ಆಗಿದೆ. ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.