ಚಿತ್ರದುರ್ಗ:ನಟಸಾರ್ವಭೌಮ ಡಾ. ರಾಜ್ಕುಮಾರ್ ಅವರು ತಮ್ಮ ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದ ಮಾನವೀಯ ಗುಣಗಳು ಮತ್ತು ಮೌಲ್ಯಗಳು ಇಂದಿನ ತಲೆಮಾರಿಗೆ ದಾರಿದೀಪವಾಗಿವೆ ಎಂದು ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ. ರಘುಮೂರ್ತಿ ಹೇಳಿದರು.
ನಗರದ ಪತ್ರಿಕಾಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಟಸಾರ್ವಭೌಮ ಡಾ.ರಾಜ್ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಡಾ.ರಾಜ್ಕುಮಾರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ರಾಜ್ಕುಮಾರ್ ಅವರು ರಾಮಾಯಣ, ಮಹಾಭಾರತದ ಪಾತ್ರಗಳಿರಲಿ, ಕಾದಂಬರಿ ಆಧಾರಿತ ಸಿನಿಮಾಗಳಿರಲಿ ಅವರು ಮಾಡದ ಪಾತ್ರಗಳೇ ಇಲ್ಲ. ಅಂದಿನ ಕಾಲದಲ್ಲಿ ಚಲನಚಿತ್ರ ಮತ್ತು ನಾಟಕಗಳ ಮೂಲಕವೇ ಜನರು ಜೀವನದ ಗುರಿಯನ್ನು ಕಂಡುಕೊಳ್ಳುತ್ತಿದ್ದರು ಮತ್ತು ಅದರಲ್ಲಿ ಡಾ. ರಾಜ್ಕುಮಾರ್ ಅವರ ಪಾತ್ರ ಬಹಳ ದೊಡ್ಡದಾಗಿತ್ತು ಎಂದು ತಿಳಿಸಿದರು.
ಪುನೀತ್ ರಾಜ್ಕುಮಾರ್ ಅವರ ಬಗ್ಗೆಯೂ ಮಾತನಾಡಿದ ಶಾಸಕ ಟಿ.ರಘುಮೂರ್ತಿ, ತಂದೆಯಿಂದ ಬಂದ ಸಂಸ್ಕಾರವನ್ನು ಪುನೀತ್ ಅವರು ಅಕ್ಷರಶಃ ಪಾಲಿಸಿದರು. ಪುನೀತ್ ಅವರು ಬದುಕಿದ್ದಾಗ ಮಾಡಿದ್ದಕ್ಕಿಂತ ಹೆಚ್ಚಿನ ಸಾಮಾಜಿಕ ಕಾರ್ಯಗಳು ಅವರು ಮರಣ ಹೊಂದಿದ ನಂತರ ಜಗತ್ತಿಗೆ ತಿಳಿಯಿತು. ಡಾ. ರಾಜ್ಕುಮಾರ್ ಅವರ ನಡೆ-ನುಡಿ ಅವರ ಮಕ್ಕಳಲ್ಲೂ ಪ್ರತಿಫಲಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ಡಾ. ರಾಜ್ಕುಮಾರ್ ಅವರು ಚಿತ್ರರಂಗದ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಅವರ ಸಿನಿಮಾಗಳನ್ನು ನೋಡಿದಾಗ ನಾವೆಲ್ಲರೂ ಅಂತಹ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂಬ ಮನೋಭಾವ ಮೂಡುತ್ತದೆ ಎಂದು ಹೇಳಿದರು.
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಡಾ.ರಾಜ್ಕುಮಾರ್ ಅವರ ಕುರಿತು ಉಪನ್ಯಾಸ ನೀಡಿದ ಚಿತ್ರದುರ್ಗ ಆಕಾಶವಾಣಿಯ ಡಾ.ನವೀನ್ ಮಸ್ಕಲ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್.ವಿನಾಯಕ ತೊಡರನಾಳ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಅಂಜಿನಪ್ಪ ಸೇರಿದಂತೆ ಮತ್ತಿತರರು ಇದ್ದರು. ಕೆ.ಗಂಗಾಧರ್ ಮತ್ತು ಸಂಗಡಿಗರು ಡಾ.ರಾಜ್ಕುಮಾರ್ ಚಲನಚಿತ್ರ ಗೀತೆಗಳ ಗಾಯನ ನಡೆಸಿಕೊಟ್ಟರು.































