ಬೆಂಗಳೂರು: ರಾಜ್ಯಕ್ಕೆ ಮುಂಗಾರು ಮಾರುತಗಳು ಅಧಿಕೃತವಾಗಿ ಲಗ್ಗೆ ಇಟ್ಟಿದ್ದು, ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಮುಂದಿನ ಒಂದು ವಾರದ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ. ಇನ್ನೆರಡು ದಿನಗಳಲ್ಲಿ ಮುಂಗಾರು ಇಡೀ ರಾಜ್ಯವನ್ನು ಆವರಿಸಿಕೊಳ್ಳಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.
ಕರಾವಳಿ ತೀರದ ಜಿಲ್ಲೆಗಳಲ್ಲಿ ಬಿಡುವಿಲ್ಲದೆ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಾಸರಗೋಡು ಜಿಲ್ಲೆಗೆ ಶನಿವಾರ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರುವ ಕಾರಣ ‘ಆರೆಂಜ್ ಅಲರ್ಟ್’ ಜಾರಿಗೊಳಿಸಲಾಗಿದೆ.
ಜೂನ್ 6ರಿಂದ 9ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಗಾಳಿಯ ವೇಗ ಮತ್ತು ಅಲೆಗಳ ಆರ್ಭಟ ಹೆಚ್ಚಾಗಲಿದ್ದು, ಮೀನುಗಾರರು ಯಾವುದೇ ಕಾರಣಕ್ಕೂ ಕಡಲಿಗೆ ಇಳಿಯಬಾರದು ಎಂದು ಎಚ್ಚರಿಸಲಾಗಿದೆ. ತೀರ ಪ್ರದೇಶದ ನಿವಾಸಿಗಳು ಜಾಗರೂಕರಾಗಿರಲು ತಿಳಿಸಲಾಗಿದೆ.
ಕರಾವಳಿ ಮಾತ್ರವಲ್ಲದೆ ರಾಜ್ಯದ ಒಳನಾಡಿನಲ್ಲೂ ಮಳೆಯ ಪ್ರಭಾವ ಹೆಚ್ಚಾಗಲಿದೆ. ಮುಂದಿನ 6 ದಿನ ಯೆಲ್ಲೋ ಅಲರ್ಟ್: ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಜೋರು ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಇರಲಿದೆ. ತುಮಕೂರಿನಲ್ಲಿ ಜೂನ್ 7ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ.ಸಿಲಿಕಾನ್ ಸಿಟಿಯಲ್ಲಿ ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಕಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.






























