ಬೆಂಗಳೂರು : ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು ಸ್ಪಷ್ಟ ಸೂಚನೆ ನೀಡಿದರು.
ವರ್ಷದ ಕೊನೆ ತಿಂಗಳಲ್ಲೇ ಖರ್ಚು ಮಾಡುವ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದಕ್ಕಾ ನೀವು ಇರುವುದು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.
2024-25 ನೇ ಸಾಲಿನಲ್ಲಿ ಆಯವ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ರೂ. 5,377 ಕೋಟಿ ಅನುದಾನ ಒದಗಿಸಲಾಗಿದೆ. ಇದುವರೆಗೆ ಅನುದಾನ ರೂ.3,631 ಕೋಟಿ ಬಿಡುಗಡೆಯಾಗಿದ್ದು ಈ ಹಣ ಕೂಡ ಪೂರ್ತಿ ಖರ್ಚು ಮಾಡದ ಬಗ್ಗೆ ತೀವ್ರವಾಗಿ ಪ್ರಶ್ನಿಸಿದರು. ಜೊತೆಗೆ ಅಂಬೇಡ್ಕರ್ ನಿಗಮದಲ್ಲಿ 900 ಕೋಟಿ, ಭೋವಿ ನಿಗಮದಲ್ಲಿ 107 ಕೋಟಿ ಸೇರಿ ಎಲ್ಲಾ ನಿಗಮಗಳಲ್ಲಿ ನೂರಾರು ಕೋಟಿ ಹಣ ಇದ್ದರೂ ಖರ್ಚು ಮಾಡದ ನಿಗಮದ ಎಂಡಿ ಗಳಿಗೆ ನೋಟಿಸ್ ನೀಡಿ, ಅಗತ್ಯ ಬಿದ್ದರೆ ಸಸ್ಪೆಂಡ್ ಮಾಡುವಂತೆ ಖಡಕ್ ಸೂಚನೆ ನೀಡಿದರು.