ಬಳ್ಳಾರಿ: ಪೋಕ್ಸೋ ಕೇಸ್ ಸಂತ್ರಸ್ತೆಯ ಹೆಸರು ಬಹಿರಂಗ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ಬಳ್ಳಾರಿ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಜನವರಿ 17 ರಂದು ಬಳ್ಳಾರಿಯಲ್ಲಿ ನಡೆದಿದ್ದ ಬೃಹತ್ ಸಮಾವೇಶದಲ್ಲಿ ಭಾಷಣ ಮಾಡಿದ್ದ ಶ್ರೀರಾಮುಲು, ಬಳ್ಳಾರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಿ ಮಾತಿನ ಬರದಲ್ಲಿ ಸಂತ್ರಸ್ತೆಯ ಹೆಸರು, ಮಾಹಿತಿ ಬಹಿರಂಗಪಡಿಸಿದ್ದರು.
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ-ಫೈರಿಂಗ್ ವಿರುದ್ಧ ಬಿಜೆಪಿ ನಾಯಕರು ನಡೆಸಿದ್ದ ಬೃಹತ್ ಸಮಾವೇಶದಲ್ಲಿ ಮಾಜಿ ಸಚಿವ ಶ್ರೀರಾಮುಲು ರೋಷಾವೇಷ ಭರಿತರಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಳ್ಳಾರಿ ಗಾಂಜಾ, ಡ್ರಗ್ಸ್ ಹಬ್ ಆಗಿದೆ. ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳುತ್ತಾ ಸಂತ್ರಸ್ತೆ ಹೆಸರು, ಹಲವು ಮಾಹಿತಿಗಳನ್ನು ಬಹಿರಂಗವಾಗಿ ಮಾತನಾಡಿದ್ದರು.
ಈ ಹಿನ್ನೆಲೆಯಲ್ಲಿ ಶ್ರೀರಾಮುಲು ವಿರುದ್ಧ ಕೇಸ್ ದಾಖಲಾಗಿದೆ. ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಶ್ರೀರಾಮುಲು ವಿರುದ್ಧ ಎಫ್ಐಆರ್ ದಾಖಲಾಗಿದೆ.
































