ತಿರುವನಂತಪುರಂ : ಕೇರಳದ ಮಾಜಿ ಮುಖ್ಯಮಂತ್ರಿ, ಸಿಪಿಐಎಂ ಹಿರಿಯ ನಾಯಕ ವಿ.ಎಸ್. ಅಚ್ಯುತಾನಂದನ್(101) ಅವರು ಸೋಮವಾರ ಮಧ್ಯಾಹ್ನ 3.20ಕ್ಕೆ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅಚ್ಯುತಾನಂದನ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಅಲಪ್ಪುಳಕ್ಕೆ ಕೊಂಡೊಯ್ಯಲಾಗುವುದು. ಹಾಗೂ ಬುಧವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಜೂನ್ 23 ರಂದು ಹೃದಯಾಘಾತದಿಂದ ಅವರನ್ನು ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಸೋಮವಾರ ಮಧ್ಯಾಹ್ನ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಸೇರಿದಂತೆ ಇತರ ಹಿರಿಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದರು.
ವಿ.ಎಸ್. ಅಚ್ಯುತಾನಂದನ್ ಅವರು 2019 ರಿಂದ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಕೇರಳದ ಅತ್ಯಂತ ಹಿರಿಯ ಮುಖ್ಯಮಂತ್ರಿಯಾಗಿದ್ದ ವಿ.ಎಸ್. ಅಚ್ಯುತಾನಂದನ್ ಅವರು ಸುಮಾರು ಐದು ದಶಕಗಳ ಕಾಲ ರಾಜ್ಯದ ಸಾಮಾಜಿಕ-ರಾಜಕೀಯ ಕ್ಷೇತ್ರಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರು 2006 ರಿಂದ 2011 ರವರೆಗೆ ಕೇರಳ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಮೂರು ಬಾರಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದರು.