ಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರು ದಕ್ಷಿಣ ಕನ್ನಡ (Dakshina Kannada) ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, ಈ ಗಂಭೀರ ಆರೋಪದ ಸತ್ಯಾಸತ್ಯತೆಯನ್ನು ತನಿಖೆಯ ಮೂಲಕ ತಿಳಿಯಲು ಮತ್ತು ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡಲು ಒತ್ತಾಯಿಸಲಾಗಿದೆ. ಅಲ್ಲದೇ ಈ ಬಗ್ಗೆ ಆರೋಪ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಎಮ್ಡಿ ಮತ್ತು ಗಿರೀಶ್ ಮಟ್ಟೆಣ್ಣನವರ್ ಅವರನ್ನು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ 100ಕ್ಕೂ ಹೆಚ್ಚು ಮೃತದೇಹಗಳನ್ನು ತಾನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಆರೋಪಿಸಿರುವುದು ರಾಜ್ಯದಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ. ಅನಾಮಧೇಯ ವ್ಯಕ್ತಿ ಜೊತೆಗೆ ಸಮೀರ್, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಎಂಬವರು ಕೂಡಾ ಇದನ್ನು ಆರೋಪಿಸಿದ್ದಾರೆ. ಈ ವ್ಯಕ್ತಿಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಸ್ನೇಹಮಯಿ ಕೃಷ್ಣ, ಈ ಪ್ರಕರಣದ ತನಿಖೆಯನ್ನು ಶೀಘ್ರಗತಿಯಲ್ಲಿ ನಡೆಸಿ, ಸಾಕ್ಷಿಗಳನ್ನು ಸಂಗ್ರಹಿಸಿ, ಸತ್ಯಾಸತ್ಯತೆಯನ್ನು ಜನರಿಗೆ ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ.
ಸಮಾಜದಲ್ಲಿ ಗೊಂದಲ, ಭಯದ ವಾತಾವರಣವನ್ನು ಮತ್ತು ಅಶಾಂತಿಯನ್ನು ಉಂಟು ಮಾಡುತ್ತಿರುವ ಎಂ.ಡಿ.ಸಮೀರ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ತಿಮರೋಡಿ ಮತ್ತು ಧರ್ಮಸ್ಥಳದಲ್ಲಿ ನೂರಾರು ಹೆಣವನ್ನು ಹೂತಿದ್ದೇನೆ ಎಂಬಂತೆ ಹೇಳಿಕೆ ನೀಡಿರುವ ವ್ಯಕ್ತಿಯನ್ನು ಮತ್ತು ಇತರರನ್ನು ತುರ್ತು ವಿಚಾರಣೆ ನಡೆಸಿ, ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಪರಿಶೀಲನೆ ನಡೆಸಿ, ಸತ್ಯಾಂಶಗಳನ್ನು ತಿಳಿದುಕೊಂಡು, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಂಡು, ಸದರಿ ಸತ್ಯಾಂಶವನ್ನು ದೇಶದ ಜನತೆಗೆ ತಿಳಿಸುವ ಮೂಲಕ ಇವರುಗಳು ಸಮಾಜದಲ್ಲಿ ಸೃಷ್ಟಿಸುತ್ತಿರುವ ಗೊಂದಲ, ಭಯ ಮತ್ತು ಅಶಾಂತಿ ಘಟನೆಗಳಿಗೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರವು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ನಾಲ್ಕು ಐಪಿಎಸ್ ಅಧಿಕಾರಿಗಳ ತಂಡವನ್ನು ರಚಿಸಿದೆ. ಈ ವಿಶೇಷ ತನಿಖಾ ತಂಡವು ಶೀಘ್ರದಲ್ಲೇ ತನಿಖೆಯನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ.