ಬೆಂಗಳೂರು: ನೀವು ಇನ್ನೂ ಕಂಪ್ಯೂಟರ್ ಕಲಿತಿಲ್ಲವೆ.! ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು 2023ರ ಡಿಸೆಂಬರ್ 31 ರವೆರೆಗೆ ಸಮಯಾವಕಾಶವನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ಅಧಿಕಾರಿಗಳು / ಸಿಬ್ಬಂದಿ ವರ್ಗದವರು ಡಿಸೆಂಬರ್ 31 ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ಈ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ. ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿರುತ್ತದೆ.
ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗಿರುವ ಅಧಿಕಾರಿ/ ನೌಕರರು ಜಾಲತಾಣ https://clt.karnataka.gov.in ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.