ರಾಜ್ಯದಲ್ಲಿ ಫೆಂಗಲ್ ಸೈಕ್ಲೋನ್ ಪರಿಣಾಮ ಭಾನುವಾರದಿಂದ ರಾಜ್ಯಾದ್ಯಂತ ಹಲವೆಡೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡು, ದಿನ ನಿತ್ಯದ ಕಾರ್ಯ ಚಟುವಟಿಕೆಗಳಿಗೆ ಮಳೆರಾಯ ಅಡ್ಡಿಪಡಿಸಿದ್ದಾನೆ.
ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಥಂಡಿ ಹಾಗೂ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ರಾಜಧಾನಿ ಬೆಂಗಳೂರು,ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ವಿಶೇಷವಾಗಿ ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆಯ ಪ್ರಭಾವ ಹೆಚ್ಚಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಪುದುಚೇರಿಗೆ ಅಪ್ಪಳಿಸಿರುವ ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳವಾರ ರಾಜ್ಯದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ನಡುವೆ, ಚಂಡಮಾರುತದ ಪ್ರಭಾವ ಮಂಗಳವಾರದಿಂದ ಕಡಿಮೆಯಾಗುವ ನಿರೀಕ್ಷೆಯಿದ್ದು, ರಾಜ್ಯದಲ್ಲಿ ಮಳೆ ಪರಿಣಾಮವೂ ತಗ್ಗಲಿದೆ. ಆದರೂ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಬೆಂಗಳೂರು, ಕೋಲಾರ, ತುಮಕೂರು ಸೇರಿ ಮತ್ತಿತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜತೆಗೆ ಕೆಲಕಾಲ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ರಾಯಚೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.