ಬೆಂಗಳೂರು: ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 18: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 18 ಮತ್ತು 19ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಐಎಂಡಿ, ಕರಾವಳಿ ಹಾಗೂ ಘಟ್ಟ ಪ್ರದೇಶಗಳಿಗೆ ಭೂಕುಸಿತ ಎಚ್ಚರಿಕೆಯನ್ನೂ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿ ಶಾಲೆ-ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ (Monsoon Rain) ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿವೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 18 ಮತ್ತು 19ರಂದು ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಈ ಹಿಂದೆ ರಾಜ್ಯದಲ್ಲಿ ಇನ್ನೂ ಕೆಲವು ವ್ಯಾಪಕ ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದರೂ, ಇದೀಗ ಕರಾವಳಿ ಭಾಗದಲ್ಲಿ ಮಳೆ ಚುರುಕಾಗತೊಡಗಿದೆ. ಆದರೆ, ರಾಜ್ಯದ ಬಹುತೇಕ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಸಾಧಾರಣ ಮಳೆಯೇ ಮುಂದುವರಿಯುವ ಸಾಧ್ಯತೆ ಇದೆ
































