ಬೆಂಗಳೂರು: ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.
ತಮ್ಮ ಮೇಲಿರುವ ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಅವರು ಸಲ್ಲಿಸಿದ್ದ ಅರ್ಜಿ ವಿವಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ಪೀಠವು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದೆ.
ಸಿಟಿ ರವಿ ಪರ ಹಿರಿಯ ವಕೀಲ ಸಂದೇಶ್ ಚೌಟ ಅವರು, ಪೊಲೀಸರು ಬಂಧನಕ್ಕೂ ಮುನ್ನ ಸಿ.ಟಿ ರವಿ ಅವರಿಗೆ ಯಾವುದೇ ನೋಟಿಸ್ ನೀಡಿಲ್ಲ. ಸಿ.ಟಿ ರವಿ ಬಂಧನವೇ ಕಾನೂನು ಬಾಹಿರವಾಗಿದೆ. ಹೀಗಾಗಿ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ವಾದಿಸಿದರು.