ಸರ್ಕಾರಿ ಹುದ್ದೆಗಳ ನೇಮಕಾತಿಗೆ ಬ್ರೇಕ್: ಅಂತಿಮ ಆದೇಶ ಪ್ರಕಟಿಸದಂತೆ ಹೈಕೋರ್ಟ್ ನಿರ್ಬಂಧ..!
ಬೆಂಗಳೂರು: ಸರ್ಕಾರ ವಿವಿಧ ಇಲಾಖೆಗಳಲ್ಲಿ ನೇಮಕಾತಿಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಒಳ ಮೀಸಲಾತಿ ಆದೇಶ ಪ್ರಶ್ನಿಸಿ ಕರ್ನಾಟಕ ಅಲೆಮಾರಿಗಳ ಮಹಾ ಒಕ್ಕೂಟದಿಂದ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರ ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು. ಆದರೆ, ಮುಂದಿನ ವಿಚಾರಣೆವರೆಗೆ ನೇಮಕಾತಿ ಆದೇಶ ನೀಡುವಂತಿಲ್ಲ ಎಂದು ಹೈಕೋರ್ಟ್ ಹೇಳಿದ್ದು, ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗ ವರದಿಯಲ್ಲಿ ಅಲೆಮಾರಿಗಳಿಗೆ ಎಸ್ಸಿಯಲ್ಲಿ ಶೇಕಡ 1ರಷ್ಟು ಒಳಮೀಸಲಾತಿ ಕಲ್ಪಿಸಬೇಕೆಂದು ಉಲ್ಲೇಖಿಸಲಾಗಿದೆ. ಆದರೆ, ರಾಜ್ಯ ಸರ್ಕಾರದ ಅಂತಿಮ ಆದೇಶದಲ್ಲಿ ಅಲೆಮಾರಿಗಳನ್ನು ಕಡೆಗಣಿಸಲಾಗಿದೆ. ಇದರಿಂದ 59 ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗುತ್ತದೆ ಎಂದು ಒಕ್ಕೂಟದ ಪರ ವಕೀಲರು ವಾದ ಮಂಡಿಸಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.