ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕಳೆದ 20 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಹೆಚ್ಚಳ ಕಂಡುಬಂದಿದೆ. ಹೀಗಾಗಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ವಹಿಸಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ತಿಳಿಸಿದೆ.
2025 ರಲ್ಲಿ ಈವರೆಗೆ ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿಲ್ಲ. ಆದರೂ ಕೋವಿಡ್ ಸೋಂಕು ಮತ್ತಷ್ಟು ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ವಹಿಸಬೇಕಾಗಿರುವೂದು ಅಗತ್ಯ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡಬೇಕು. ಸಾರ್ವಜನಿಕರು ಕೈಗಳ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಮತ್ತು ನಿಯಮಿತವಾಗಿ ಹ್ಯಾಂಡ್ ಸ್ಯಾನಿಟೈಸರ್ಗಳನ್ನು ಬಳಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.