ಚಿತ್ರದುರ್ಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾಗಿರುವ “ಶಕ್ತಿ” ಯೋಜನೆಯಡಿ 500 ಕೋಟಿಗೂ ಹೆಚ್ಚು ಮಹಿಳೆಯರು ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹಿನ್ನಲೆಯಲ್ಲಿ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮಾಚರಣೆ ನಡೆಯಿತು.
ಚಿತ್ರದುರ್ಗ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅಲಂಕೃತವಾಗಿರುವ ಬಸ್ಗೆ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಅವರು ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಮತ್ತು ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಹೂ ಹಾಗೂ ಸಿಹಿ ವಿತರಣೆ ಮಾಡಿದರು.
ಐದು ಗ್ಯಾರಂಟಿ ಯೋಜನೆಗಳ ಪೈಕಿ “ಶಕ್ತಿ” ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಕಳೆದ 2023 ರ ಜೂನ್ 11 ರಿಂದ ಜಾರಿಗೊಳಿಸಿದ್ದು, ರಾಜ್ಯದ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ ಫಲಾನುಭವಿಗಳ ಸಂಖ್ಯೆ 500 ಕೊಟಿ ಗಡಿ ದಾಟಿದ್ದು, ಈ ಸಂಭ್ರಮವನ್ನು ಸಾಂಕೇತಿಕವಾಗಿ ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲ್ಲೂಕುಗಳಲ್ಲಿನ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ, ಬಸ್ಸಿಗೆ ಪೂಜೆ ಸಲ್ಲಿಸಿ, ಸಾರಿಗೆ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ಸಿಹಿ ತಿನಿಸಿ ಸಂಭ್ರಮಾಚರಣೆ ಮಾಡಲಾಯಿತು.
ಶಕ್ತಿ ಯೋಜನೆಯ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಹೂವು, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶಕ್ತಿ ಯೋಜನೆಗೆ ಸಂಬಂಧಿಸಿದ ಸಾಧನೆ ಬಿಂಬಿಸುವ ಫ್ಲೆಕ್ಸ್ ಗಳನ್ನು ಬಸ್ ನಿಲ್ದಾಣ ಆವರಣದಲ್ಲಿ ಅಳವಡಿಸಲಾಗಿತ್ತು. ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಶಕ್ತಿ ಯೋಜನೆಯ ಸಾಧನೆಯನ್ನು ಸಿಹಿ ಸವಿಯುವ ಮೂಲಕ ಸಂಭ್ರಮಿಸಿ, ಇಂತಹ ಉತ್ತಮ ಯೋಜನೆ ಜಾರಿಗೊಳಿಸಿದ ಸರ್ಕಾರಕ್ಕೆ ಜೈಕಾರ ಹಾಕಿದರು.
ಫಲಾನುಭವಿಗಳ ಅನಿಸಿಕೆ: ರಾಜ್ಯದ ಸರ್ಕಾರದ ಶಕ್ತಿ ಯೋಜನೆಯಿಂದ ಬಹಳ ಅನುಕೂಲವಾಗಿದೆ. 500 ಕೋಟಿಗೆ ಹೆಚ್ಚು ಮಹಿಳಾ ಫಲಾನುಭವಿಗಳು ಸರ್ಕಾರಿ ಸ್ವಾಮ್ಯದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ ಮೈಲಿಗಲ್ಲು ಸಾಧಿಸಿರುವುದು ಸಂತಸದ ಸಂಗತಿ. ನಾರಿಶಕ್ತಿಯ ಸಬಲೀಕರಣಕ್ಕೆ ಸಹಕಾರಿಯಾಗಿರುವ ಶಕ್ತಿ ಯೋಜನೆ ಮುಂದುವರೆಯಬೇಕು ಎನ್ನುತ್ತಾರೆ ಭರಮಸಾಗರದ ನಿರ್ಮಲ.
ರಾಜ್ಯ ಸರ್ಕಾರವು ಬಡವರಿಗಾಗಿಯೇ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕು ಹಸನಾಗಿದೆ. ನಮ್ಮಂತಹ ಉದ್ಯೋಗಿಗಳು ಬಸ್ ಪ್ರಯಾಣಕ್ಕಾಗಿ ಖರ್ಚು ಮಾಡುತ್ತಿದ್ದ ಹಣವನ್ನು, ಮನೆಯ ಇತರೆ ಖರ್ಚು ವೆಚ್ಚ ಭರಿಸಲು ಅನುಕೂಲವಾಗಿದೆ. ಹಾಗಾಗಿ ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಅಡೆತಡೆ ಇಲ್ಲದೇ ಹೀಗೆಯೇ ಮುಂದುವರೆಯಬೇಕು ಎಂಬುವುದೇ ನನ್ನ ಆಸೆ. ಬಡವರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಧನ್ಯವಾದಗಳು ಎನ್ನುತ್ತಾರೆ ಅರವಿಂದ ಗಾರ್ಮೆಟ್ಸ್ನಲ್ಲಿ ಕೆಲಸ ಮಾಡುವ ಉದ್ಯೋಗಿ ವಿನುತಾ.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಹಾಗೂ ಬಿ.ಟಿ. ನಿರಂಜನ್, ತಾಲ್ಲೂಕು ಅಧ್ಯಕ್ಷ ಪ್ರಕಾಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಅಬ್ದುಲ್ಲಾ ಷಾವಲಿ, ಇಂದಿರಾ, ಪಾಲೇಗೌಡ, ತಾಲ್ಲೂಕು ಸಮಿತಿ ಸದಸ್ಯರಾದ ರಾಜೇಶ್ ಮದುರೆ, ವಿ. ದಿನೇಶ್, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್, ಸಾರಿಗೆ ಸಂಸ್ಥೆಯ ಸಿಬ್ಬಂದಿ, ವಿವಿಧ ಮುಖಂಡರು ಇದ್ದರು.