ವಿಜಯಪುರ :ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಅವರು ಇಂದು ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.
ಗೆಜೆಟ್ ಅಧಿಸೂಚನೆಯಾದರೆ ಅಣೆಕಟ್ಟು ಎತ್ತರಿಸಲು ಅನುಕೂಲ
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. . ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ ಎಂದರು.