ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಈ ವಾರ ಪೂರ್ತಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ದಿನಗಳ ಮುನ್ಸೂಚನೆ: ಹವಾಮಾನ ಇಲಾಖೆಯ ಮಾಹಿತಿಯಂತೆ ಮಳೆಯ ಆರ್ಭಟ ಮುಂದುವರಿಯಲಿದೆ. ಕರಾವಳಿ ಮತ್ತು ಮಲೆನಾಡು: ಮಾರ್ಚ್ 24 ರಿಂದ 30 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ: ಮುಂದಿನ 3 ದಿನಗಳ ಕಾಲ ಆಲಿಕಲ್ಲು ಮಳೆಯ ಮುನ್ಸೂಚನೆ ಇದೆ. ಮಾರ್ಚ್ 29 ರಿಂದ ಎರಡು ದಿನಗಳ ಕಾಲ ಹೆಚ್ಚಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಈಗಾಗಲೇ ಸೋಮವಾರದಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.ರಾಣೇಬೆನ್ನೂರಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಅನೇಕ ವಿದ್ಯುತ್ ಕಂಬಗಳು ನೆಲಕ್ಕಚ್ಚಿವೆ. ಮರವೊಂದು ಆಟೋರಿಕ್ಷಾದ ಮೇಲೆ ಬಿದ್ದ ಪರಿಣಾಮ ವಾಹನ ಜಖಂಗೊಂಡಿದೆ.

































