ಬಾಗಲಕೋಟೆ : ಅಡುಗೆ ಅನಿಲ (LPG) ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ.
ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಈ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ಚೇತನ್ ಮತ್ತು ಆತನ ತಾಯಿ ಶೋಭಾ ಅವರಿಗೆ ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ಭೀಕರತೆ ಎಷ್ಟಿತ್ತೆಂದರೆ ಮನೆಯ ಗೋಡೆಗಳಿಗೆ ಹಾನಿಯಾಗಿದ್ದು, ಮನೆಯಲ್ಲಿದ್ದ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ದಿನಬಳಕೆಯ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಿಲ ಸೋರಿಕೆಯಿಂದ ಈ ಅವಘಡ ಸಂಭವಿಸಿದೆಯೇ ಅಥವಾ ಬೇರೆ ಕಾರಣಗಳಿವೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.































