ಬೆಂಗಳೂರು: ಗುರುವಾರ ರಾತ್ರಿ ಬಿದ್ದ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭೂ ಕುಸಿತ, ಗೋಡೆ ಕುಸಿತ ಆಗಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿರುವ ಸಿಎಂ ಸಿದ್ದರಾಮಯ್ಯ ಅವರು, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಸಕ್ತ ವರ್ಷ ರಾಜ್ಯದಲ್ಲಿ ಹಲವೆಡೆ ಮಳೆ ಬೀಳುತ್ತಿದ್ದು, ಇದರಿಂದ ಹಲವೆಡೆ ಸಂಚಾರ ಹಾಗೂ ದೈನಂದಿನ ಬದುಕಿಗೆ ಸಾರ್ವಜನಿಕರಿಗೆ ಸಂಕಷ್ಟ ಎದುರಾಗಿದೆ. ಇವುಗಳನ್ನು ಪರಿಹರಿಸುವ ಜೊತೆಗೆ ಮುನ್ನೆಚ್ಚರಿಕೆಯಾಗಿ ಕೈಗೊಳ್ಳಬೇಕಿರುವ ಕ್ರಮಗಳು ಮತ್ತು ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜತೆ ನಡೆಸಿದ ಸಿಎಂ ಸಭೆ ನಡೆಸಿ, ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.
ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.