ನವದೆಹಲಿ : ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, “ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಿ. 1ರಿಂದ ಡಿ. 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಜನರ ಆಕಾಂಕ್ಷೆಗಳನ್ನು ಪೂರೈಸುವ ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.
ಬಿಹಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಸಂಸತ್ತಿನ ಚಳಿಗಾಲದ ಅಧಿವೇಶನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೆಚ್ಚುವರಿಯಾಗಿ, ಭಾರತದ ಚುನಾವಣಾ ಆಯೋಗ 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಾರಂಭಿಸಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವಿಷಯದಲ್ಲಿ ವಿರೋಧ ಪಕ್ಷಗಳು ಸರ್ಕಾರವನ್ನು ಸಿಲುಕಿಸಲು ಯತ್ನಿಸಬಹುದು ಎನ್ನಲಾಗುತ್ತಿದೆ.

































