ಚಿತ್ರದುರ್ಗ : ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರುಗಳ ಕೊರತೆಯಿರುವುದನ್ನು ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ಕ್ರೀಡಾ ಸಚಿವರ ಗಮನ ಸೆಳೆಯುವುದಾಗಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ನೀಡಿದರು.
ಸ್ಟೇಡಿಯಂನಲ್ಲಿ ಮೂರು ದಿನಗಳ ಕಾಲ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷರ ಹಾಗೂ ಮಹಿಳೆಯರ 13 ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯದ ತಂಡದ ಆಯ್ಕೆ-2024 ಮುಕ್ತಾಯ ಸಮಾರಂಭದಲ್ಲಿ ಗುರುವಾರ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಕ್ರೀಡಾಪಟುಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆಯಿದೆಯೆಂದು ದೈಹಿಕ ಶಿಕ್ಷಣ ನಿರ್ದೇಶಕರುಗಳು ನನ್ನ ಗಮನಕ್ಕೆ ತಂದಿದ್ದಾರೆ. ಮುಂದಿನ ದಿನಗಳಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿ ಪ್ರೋತ್ಸಾಹ ನೀಡಲಾಗುವುದು. ಸ್ಟೇಡಿಯಲ್ಲಿ ಒಂದು ಕೋಟಿ ರೂ.ವೆಚ್ಚದಲ್ಲಿ ಕ್ಲೈಂಬಿಂಗ್ ವಾಲ್ ನಿರ್ಮಿಸಲಾಗುವುದು. ನಾಲ್ಕು ಗೋಡೆಗಳ ನಡುವೆ ಶಿಕ್ಷಣ ಕಲಿಯುವುದರ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವ ಕೊಡಬೇಕಾಗಿರುವುದರಿಂದ ಪೋಷಕರುಗಳು ತಮ್ಮ ಮಕ್ಕಳ ಕ್ರೀಡೆಗೆ ಉತ್ತೇಜನ ನೀಡುವಂತೆ ಮನವಿ ಮಾಡಿದರು.
ದಾವಣಗೆರೆ ವಿಶ್ವವಿದ್ಯಾನಿಲಯದ ಕ್ರೀಡಾಪಟುಗಳು ಒಳ್ಳೆಯ ಸಾಧನೆ ಮಾಡಿ ಒಲಂಪಿಕ್ಸ್ನಲ್ಲಿ ಪಾಲ್ಗೊಳ್ಳುವಂತಾಗಬೇಕು. ತಂದೆ-ತಾಯಿಗಳು ನಿಮ್ಮ ಮೇಲೆ ನಂಬಿಕೆಯಿಟ್ಟು ಕಳಿಸಿದ್ದಾರೆ. ಅದನ್ನು ಉಳಿಸಿಕೊಳ್ಳಿ ಎಂದು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ವಿನಂತಿಸಿದರು.
ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಹೆಚ್.ಗಿರಿಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಪ್ರಾಂಶುಪಾಲರಾದ ಸಂಗೇನಹಳ್ಳಿ ಅಶೋಕ್ಕುಮಾರ್, ಕಾಲೇಜು ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಎಂ.ಸಿದ್ದಪ್ಪ, ನಿವೃತ್ತ ಪ್ರಾಂಶುಪಾಲರಾದ ಡಾ.ಸಿ.ಶಿವಲಿಂಗಪ್ಪ
ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಹೆಚ್.ತಿಪ್ಪೇಸ್ವಾಮಿ, ಸಿಂಡಿಕೇಟ್ ಸದಸ್ಯ ದ್ಯಾಮಪ್ಪ, ಡೀನ್ ಹಾಗೂ ಪ್ರಭಾರೆ ದೈಹಿಕ ಶಿಕ್ಷಣ ನಿರ್ದೇಶಕ ಡಾ.ವೆಂಕಟೇಶ್ ಕೆ. ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲರಾದ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ಇನ್ನು ಅನೇಕರು ವೇದಿಕೆಯಲ್ಲಿದ್ದರು.