ಮಂಗಳೂರು: ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ತೀರ್ಥಸ್ನಾನ ಮಾಡಿದ್ದಾರೆ.
144 ವರ್ಷಗಳಿಗೊಮ್ಮೆ ನಡೆಯುವ ಈ ಐತಿಹಾಸಿಕ ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸಂಸದರು, ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪ್ರಯಾಗ್‌ರಾಜ್‌ನ ಈ ಮಹಾಕುಂಭದಲ್ಲಿ ಪಾಲ್ಗೊಳ್ಳಲು ನನಗೆ ಸೌಭಾಗ್ಯ ಸಿಕ್ಕಿದ್ದು ನಿಜಕ್ಕೂ ಸಂತಸ ತಂದಿದೆ. ತ್ರಿವೇಣಿ ಸಂಗಮದಲ್ಲಿ ಮಿಂದದ್ದು ಮರೆಯಲಾಗದ ಅದ್ಭುತ ಆಧ್ಯಾತ್ಮಿಕ ಅನುಭವ. ಈ ಪುಣ್ಯಸ್ನಾನದಿಂದ ನವ ಚೈತನ್ಯ ಮೂಡಿಸಿದೆ. ಉತ್ತರ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಧಾರ್ಮಿಕ-ಆಧ್ಯಾತ್ಮಿಕ-ಸಾಂಸ್ಕೃತಿಕ ಸಂಗಮ ಮಹಾ ಕುಂಭಮೇಳವನ್ನು ಅಚ್ಚುಕಟ್ಟಾಗಿ ನಡೆಯುತ್ತಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ಇಲ್ಲಿಗೆ ಬರುತ್ತಿರುವ ಕೋಟ್ಯಂತರ ಭಕ್ತಾದಿಗಳಿಗೆ ಅದ್ಭುತ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಬ್ರಿಜೇಶ್ ಚೌಟ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.