ನವದೆಹಲಿ: ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಹಾಗೂ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು ನರೇಂದ್ರ ಮೋದಿಯನ್ನು ಪ್ರಧಾನಿ ಹುದ್ದೆಗೆ ಅನುಮೋದಿಸಿದ್ದಾರೆ. ಇಂದು ಇಲ್ಲಿ ನಡೆದ ಎನ್ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ನರೇಂದ್ರ ಮೋದಿಯನ್ನು ಬಿಜೆಪಿ ನೇತೃತ್ವದ ಎನ್ಡಿಎ ಸರಕಾರದ ಪ್ರಧಾನಿ ಅಭ್ಯರ್ಥಿಯನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಜೆಡಿಯು ವರಿಷ್ಠ ನಿತೀಶ್ ಕುಮಾರ್, “ವಿರೋಧ ಪಕ್ಷಗಳ ಮೈತ್ರಿಕೂಟವು ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನರೇಂದ್ರ ಮೋದಿ ಮಾತ್ರ ದೇಶಕ್ಕಾಗಿ ಕೆಲಸ ಮಾಡಿದ್ದಾರೆ” ಎಂದು ಪ್ರಶಂಸಿಸಿದರು. ಜೊತೆಗೆ ವೇದಿಕೆ ಮೇಲೆ ನಿತೀಶ್ ಕುಮಾರ್ ಅವರು ಪ್ರಧಾನಿ ಮೋದಿಯವರ ಪಾದಗಳನ್ನು ಮುಟ್ಟುವ ಪ್ರಯತ್ನವನ್ನು ಮಾಡಿರುವುದು ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಟಾಂಗ್ ಕೊಟ್ಟಂತಿದೆ. ಇನ್ನು ಎಲ್ಲಾ ಎನ್ಡಿಎ ಸದಸ್ಯರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮೋದಿಯನ್ನು ಹೊಸ ಪ್ರಧಾನಿಯಾಗಿ ಅನುಮೋದಿಸುವ ಬೆಂಬಲ ಪತ್ರವನ್ನು ಹಸ್ತಾಂತರಿಸುವ ನಿರೀಕ್ಷೆಯಿದೆ. ಸಂಸತ್ತಿನ ಸೆಂಟ್ರಲ್ ಹಾಲ್ ನಡೆದ ಎನ್ಡಿಎ ನಾಯಕರ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅಭಿನಂದಿಸಿದ್ದಾರೆ. ಅಲ್ಲದೇ ಜೆಡಿಯು ಪಕ್ಷ ನಾಯಕ ನಿತೀಶ್ ಕುಮಾರ್ ಅವರು ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಅನುಮೋದಿಸಿ ಇದೇ ವೇಳೆ ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.
