ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಚಿತ್ರದುರ್ಗ: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 15 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ, 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಹಾಗೂ ದಾಖಲೆಗಳ ಪರಿಶೀಲನಾ ವೇಳಾಪಟ್ಟಿಯನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಅಂಕಪಟ್ಟಿಯ ಆಧಾರದ ಮೇಲೆ, ಸರ್ಕಾರದ ನಿರ್ದೇಶನದಂತೆ ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ)(ಸಾಮಾನ್ಯ) ನಿಯಮಗಳು 2021ರ ಅನ್ವಯ ಈ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುತ್ತಿದೆ. ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಂತೆ ನವೆಂಬರ್ 23ರಂದು 1:3 ಅನುಪಾತದ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಜಾಲತಾಣ https://chitradurga.nic.in ಮತ್ತು ಕಚೇರಿಯ ಸೂಚನಾಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಹಾಗೂ ವಿಕಲಚೇತನ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆಯು ಡಿಸೆಂಬರ್ 8ರಂದು ಬೆಳಿಗ್ಗೆ 10:30ಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ. ನಂತರ ಡಿಸೆಂಬರ್ 14ರಂದು ತಾತ್ಕಾಲಿಕ 1:1 ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.
ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಡಿಸೆಂಬರ್ 15 ರಿಂದ 21ರವರೆಗೆ ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಕಚೇರಿ ವೇಳೆಯಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂತಿಮವಾಗಿ ಡಿಸೆಂಬರ್ 24ರಂದು ಅಂತಿಮ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಎಸ್.ರಮ್ಯಾ ತಿಳಿಸಿದ್ದಾರೆ.