ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದ್ದು, ಚುನಾವಣಾ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ ಪ್ರಕಟಿಸಿದೆ. ರಾಜ್ಯದ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ
ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟೆಂಬರ್ 29, ಮಂಗಳವಾರ ಅಧಿಸೂಚನೆ ಪ್ರಕಟವಾಗಲಿದೆ. ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅಕ್ಟೋಬರ್ 6 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅಕ್ಟೋಬರ್ 9ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.
ಅಕ್ಟೋಬರ್ 23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಅಕ್ಟೋಬರ್ 27ರಂದು ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ. ಚುನಾವಣಾ ಪ್ರಕ್ರಿಯೆ ಅಕ್ಟೋಬರ್ 31ರೊಳಗೆ ಪೂರ್ಣಗೊಳ್ಳಲಿದೆ.
ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.