ಬಳ್ಳಾರಿ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯನ್ನು ನೀಗಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಂಡಿದ್ದು, 1,000 ವೈದ್ಯರ ಹುದ್ದೆಗಳ ಭರ್ತಿಗೆ ಸಚಿವ ಸಂಪುಟದಿಂದ ಒಪ್ಪಿಗೆ ದೊರೆತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC) ವೈದ್ಯರು ಸೇರಿದಂತೆ ಸಂಪೂರ್ಣ ಸಿಬ್ಬಂದಿ ನಿಯೋಜನೆಗೊಳ್ಳಬೇಕು ಎಂಬ ಉದ್ದೇಶದಿಂದ 250 ವೈದ್ಯರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಜಿಲ್ಲೆಗಳ ಸ್ಥಳೀಯ ಅಗತ್ಯಕ್ಕೆ ತಕ್ಕಂತೆ ಹೊರಗುತ್ತಿಗೆ ಆಧಾರದಲ್ಲಿ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ಆರೋಗ್ಯ ಸೇವೆ ಬಲಪಡಿಸಲು ಶೀಘ್ರದಲ್ಲೇ 350 ಹೊಸ ಆ್ಯಂಬುಲೆನ್ಸ್ ಖರೀದಿ ರಾಜ್ಯದ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ (CHC) ಆ್ಯಂಬುಲೆನ್ಸ್ ಸೌಲಭ್ಯ ಒದಗಿಸುವ ಉದ್ದೇಶದಿಂದ ಸರ್ಕಾರ ಶೀಘ್ರದಲ್ಲೇ ಹೊಸ 350 ಆ್ಯಂಬುಲೆನ್ಸ್‌ಗಳನ್ನು ಖರೀದಿಸಲಿದೆ ಎಂದು ಸಚಿವರು ಪ್ರಕಟಿಸಿದರು. ಪ್ರಸ್ತುತ ರಾಜ್ಯಾದ್ಯಂತ 450 ಆ್ಯಂಬುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಮೀಣ ಭಾಗದ ರೋಗಿಗಳಿಗೆ ತುರ್ತು ಚಿಕಿತ್ಸೆ ಸುಲಭವಾಗಿ ಸಿಗುವಂತೆ ಸೇವೆಗಳನ್ನು ವಿಸ್ತರಿಸಲಾಗುವುದು. ಗ್ರಾಮೀಣ ಮತ್ತು ಸಣ್ಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಯನ್ನು ವ್ಯವಸ್ಥಿತಗೊಳಿಸಲು ಈ ಕ್ರಮ ಸಹಕಾರಿಯಾಗಲಿದೆ ಎಂದರು.
ಸಮಯಕ್ಕೆ ಸರಿಯಾಗಿ ತಲುಪದಿದ್ದರೆ 3,000 ರೂ. ದಂಡದ ಎಚ್ಚರಿಕೆ ಆ್ಯಂಬುಲೆನ್ಸ್ ಸೇವೆಗಳಲ್ಲಿ ಯಾವುದೇ ಲೋಪ ಉಂಟಾಗದಂತೆ ಕಟ್ಟುನಿಟ್ಟಿನ ನಿಯಮ ರೂಪಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಗ್ರಾಮೀಣ ಭಾಗದಿಂದ ಕರೆ ಬಂದ ತಕ್ಷಣ ಆ್ಯಂಬುಲೆನ್ಸ್‌ಗಳು 20 ರಿಂದ 25 ನಿಮಿಷಗಳ ಒಳಗಾಗಿ ತಾಲೂಕು ಕೇಂದ್ರಗಳನ್ನು ತಲುಪಬೇಕು ಎಂಬುದು ಸರ್ಕಾರದ ನಿಯಮವಾಗಿದೆ. ಒಂದು ವೇಳೆ ನಿಗದಿತ ಸಮಯ ಪಾಲನೆ ಮಾಡದಿದ್ದಲ್ಲಿ ಅಥವಾ ಸೇವೆಯಲ್ಲಿ ವಿಳಂಬ ಧೋರಣೆ ತೋರಿದರೆ, ಆ್ಯಂಬುಲೆನ್ಸ್ ಉಸ್ತುವಾರಿ ವಹಿಸಿಕೊಂಡಿರುವ ಸಂಸ್ಥೆ ಅಥವಾ ಸಿಬ್ಬಂದಿಗೆ 3,000 ರೂಪಾಯಿಗಳ ದಂಡ ವಿಧಿಸಲಾಗುವುದು ಎಂದು ಅವರು ಎಚ್ಚರಿಸಿದರು.