ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದೇ ನವೆಂಬರ್ 03ರಂದು ಮಂಗಳವಾರ ಹಿರಿಯೂರು ತಾಲ್ಲೂಕಿನಾದ್ಯಂತ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪರಿಶಷ್ಟ ವರ್ಗಗಳ ಕಲಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದರು.
ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ ವೇಳಾಪಟ್ಟಿ ಹಾಗೂ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 10 ಗಂಟೆಗೆ ಹಿರಿಯೂರು ನಗರಕ್ಕೆ ಆಗಮಿಸುವ ಮುಖ್ಯಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಧರ್ಮಪುರದಲ್ಲಿ ನೂತನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಧರ್ಮಪುರ 8 ಕೆರೆಗಳಿಗೆ ನೀರು ಹರಿಸುವ ಕುರಿತು ಸ್ಥಳೀಯ ರೈತ ಮುಖಂಡರೊಂದಿಗೆ ಸಂವಾದ ನಡೆಸಿ, ಅವರ ಕುಂದುಕೊರತೆ ಆಲಿಸಲಿದ್ದಾರೆ.
ನಂತರ ಸುಮಾರು 12:30 ಗಂಟೆಗೆ ಜವನಗೊಂಡನಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯಿತಿ ದಿಂಡಾವರದಲ್ಲಿ ಸಣ್ಣ ನೀರಾವರಿ ಇಲಾಖೆಯ ರೂ. 244 ಕೋಟಿ ವೆಚ್ಚದಲ್ಲಿ ಗಾಯತ್ರಿ ಜಲಾಶಯ ಸೇರಿದಂತೆ 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನಂತರ ಮಧ್ಯಾಹ್ನ 2 ಗಂಟೆ ವೇಳೆಗೆ ಹಿರಿಯೂರು ನಗರದ ಒಕ್ಕಲಿಗರ ವಿದ್ಯಾರ್ಥಿನಿಲಯ ಆವರಣದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ, ರೂ.5 ಕೋಟಿ ವೆಚ್ಚದಲ್ಲಿ ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ರೂ. 100 ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ನಗರಾಭಿವೃದ್ಧಿ ಇಲಾಖೆಯಿಂದ ತಾಲೂಕಿನಲ್ಲಿ ಮಂಜೂರಾಗಿರುವ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಗಲಿದೆ. ಬಳಿಕ ಮಧ್ಯಾಹ್ನ ಭೋಜನದ ಸಮಯದಲ್ಲಿ ನಗರ ಪ್ರವಾಸಿ ಮಂದರಿದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ.
ಮಧ್ಯಾಹ್ನ 3 ಗಂಟೆಯ ನಂತರ ಇತ್ತೀಚೆಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ಹರಿಸಲಾಗಿರುವ ಐಮಂಗಲ ಹೋಬಳಿಯ 12 ಕೆರೆಗಳ ವ್ಯಾಪ್ತಿಯ ಐಮಂಗಲ ಕೆರೆಯಲ್ಲಿ ಗಂಗಾಪೂಜೆ ನೆರವೇರಿಸಿ, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಬಳಿಕ ಸಿಎಂ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಸಚಿವರು ವಿವರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಸಾರಿಗೆ ಸಚಿವರು, ಸಣ್ಣ ನೀರಾವರಿ ಸಚಿವರು, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಸಮಾಜ ಕಲ್ಯಾಣ ಸಚಿವರು ಹಾಗೂ ಲೋಕೋಪಯೋಗಿ ಸಚಿವರು ಸೇರಿದಂತೆ ಹಲವು ಹಿರಿಯ ನಾಯಕರು ಮತ್ತು ಶಾಸಕರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಎಸ್.ರಮ್ಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಇದ್ದರು.