ದಾವಣಗೆರೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ರಾಗಿಯನ್ನು ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ರಾಗಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ಗೆ ರೂ. 5,205/- ರಂತೆ ರೈತರಿಂದ ಖರೀದಿಸಲು ದಾವಣಗೆರೆ ಜಿಲ್ಲೆಯ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಪ್ರಾಂಗಣಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ಹಾಗೂ ಖರೀದಿ ಏಜೆನ್ಸಿಯನ್ನು ನೇಮಕ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರಸ್ವಾಮಿ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಮಾರುಕಟ್ಟೆ ಧಾರಣೆ ಕುಸಿತ ಹಾಗೂ ರೈತರ ಮನವಿಯನ್ನು ಪರಿಗಣಿಸಿ ಮಾರುಕಟ್ಟೆ ಪ್ರವೇಶಿಸಲು ಪ್ರಸ್ತುತ ಮುಕ್ತ ಮಾರುಕಟ್ಟೆಯಲ್ಲಿ ರಾಗಿಗೆ ಪ್ರತಿ ಕ್ವಿಂಟಾಲ್ಗೆ ರೂ. 3,000/- ರಿಂದ ರೂ. 3,500/- ರವರೆಗೆ ಮಾತ್ರ ದರವಿರುವುದರಿಂದ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ.
ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಒಟ್ಟು 33,581.94 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗಿದ್ದು, ಅಂದಾಜು 8,39,548.50 ಕ್ವಿಂಟಾಲ್ ಇಳುವರಿ ನಿರೀಕ್ಷಿಸಲಾಗಿದೆ ಎಂದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರಾದ ಜಿಯಾವುಲ್ಲಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಮಧುಸೂದನ್, ಎಪಿಎಂಸಿ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.