ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತಕ್ಕೆ ಕಾರಣವಾದವರ ಬಂಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಆದೇಶ ಹೊರಡಿಸಿದ್ದಾರೆ.
ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ.
ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.