ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಮತ್ತೊಮ್ಮೆ ಪ್ರತಿಭಟನೆಯ ಕಿಚ್ಚು ಹರಡಿದೆ. ಇಮ್ರಾನ್ ಖಾನ್ ಬೆಂಬಲಿಗರು ಇಸ್ಲಾಮಾಬಾದ್ ತಲುಪಿದ್ದು, ಭದ್ರತಾ ಪಡೆಗಳೊಂದಿಗೆ ಸಂಘರ್ಷಕ್ಕೆ ಇಳಿದ ಕಾರಣ ಹಿಂಸಚಾರ ನಡೆದಿದೆ. ಹೌದು ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಿಡುಗಡೆಗೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರೊಡನೆ ನಡೆದ ಘರ್ಷಣೆಯಲ್ಲಿ ನಾಲ್ವರು ಸೈನಿಕರು ಹಾಗೂ ಓರ್ವ ಪ್ರತಿಭಟನಾಕಾರ ಸಾವಿಗೀಡಾಗಿದ್ದಾನೆ. ಈ ಘಟನೆಯ ಬಳಿಕ ಪಾಕಿಸ್ತಾನದ ಸೇನೆ ʻಕಂಡಲ್ಲಿ ಗುಂಡುʼ ಆದೇಶ ಹೊರಡಿಸಿದೆ. ಇಮ್ರಾನ್ ಖಾನ್ ಬೆಂಬಲಿಗರು ವಿವಿಧೆಡೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸುತ್ತ ಸೋಮವಾರ ರಾಜಧಾನಿ ಇಸ್ಲಾಮಾಬಾದ್ ಪ್ರವೇಶಿಸಿದ್ದಾರೆ. ಘರ್ಷಣೆಯಲ್ಲಿ 4 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷ, ಪಂಜಾಬ್ ಮತ್ತು ಇಸ್ಲಾಮಾಬಾದ್‌ನಲ್ಲಿ ಪೊಲೀಸರು 3,500 ಕ್ಕೂ ಹೆಚ್ಚು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಹೇಳಿದೆ.
