ನವದೆಹಲಿ : ಭಾರತದ ದಾಳಿಯಿಂದ ಕೋಪಗೊಂಡಿರುವ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ 10 ಮಂದಿ ಭಾರತೀಯ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದಕ್ಕೆ ಕೋಪಗೊಂಡಿರುವ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ ಬಳಿ ಮನಬಂದಂತೆ ಜನರ ಮೇಲೆ ಗುಂಡು ಹಾರಿಸಿದೆ. ಪಾಕ್ ಎಲ್‌ಒಸಿ ಬಳಿಯ ಹಳ್ಳಿಗಳ ಮೇಲೆ ಫಿರಂಗಿ ಮತ್ತು ಮೋರ್ಟರ್‌ಗಳಿಂದ ಶೆಲ್ ದಾಳಿ ನಡೆಸಿದ್ದು, ಇದರಲ್ಲಿ ಒರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ 38 ಮಂದಿ ಗಾಯಗೊಂಡಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ 10 ಜನರು ಮತ್ತು ರಾಜೌರಿ ಜಿಲ್ಲೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೆ ಭಾರತೀಯ ಸೇನೆಯೂ ತಕ್ಕ ಉತ್ತರ ನೀಡಿದೆ. ಭಾರತದ ಪ್ರತೀಕಾರದ ಕ್ರಮದಲ್ಲಿ ಪಾಕಿಸ್ತಾನ ಸೇನೆಯೂ ನಷ್ಟ ಅನುಭವಿಸಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್‌ನಲ್ಲಿರುವ ಎಲ್ಲಾ ಶಾಲಾ ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಇಂದು ಮುಚ್ಚಲ್ಪಡುತ್ತವೆ ಎಂದು ಜಮ್ಮು ವಿಭಾಗೀಯ ಆಯುಕ್ತರು ಮಾಹಿತಿ ನೀಡಿದ್ದಾರೆ.