ಬೆಂಗಳೂರು : ಎಐಸಿಸಿ ಅಧ್ಯಕ್ಷ ಮತ್ತು ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಯಶಸ್ವಿಯಾಗಿ ಪೇಸ್ಮೇಕರ್ ಅಳವಡಿಕೆಯಾಗಿದೆ. ಕೆಲ ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರು ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೇಸ್ಮೇಕರ್ ಅಳವಡಿಕೆಯ ಪ್ರಕ್ರಿಯೆ ಯಶಸ್ವಿಯಾಗಿ ಮುಗಿದಿದ್ದು, ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದ ಮೂಲಗಳು ಹಾಗೂ ವೈದ್ಯರು ತಿಳಿಸಿವೆ.
ಖರ್ಗೆಯವರ ಆರೋಗ್ಯ ಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಕಾಳಜಿ ವ್ಯಕ್ತಪಡಿಸಿದ್ದಾರೆ. ಖರ್ಗೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಆರೋಗ್ಯ ವಿಚಾರಿಸಿ ಅವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಇದನ್ನೇ ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಖಾತೆಯಲ್ಲಿ ಶೇರ್ ಮಾಡಿಕೊಂಡಿರುವ ಅವರು, “ಖರ್ಗೆ ಜೀಗೆ ಬೇಗನೆ ಗುಣಮುಖತೆ ಮತ್ತು ದೀರ್ಘಾಯುಷ್ಯವನ್ನು ಪ್ರಾರ್ಥಿಸುತ್ತೇನೆ,” ಎಂದು ತಿಳಿಸಿದ್ದಾರೆ.
ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಕೂಡ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪೇಸ್ಮೇಕರ್ ಅಳವಡಿಕೆ ಯಶಸ್ವಿಯಾಗಿದೆ, ಖರ್ಗೆಯವರ ಆರೋಗ್ಯ ಸುಧಾರಣೆಯಲ್ಲಿದೆ ಹಾಗೂ ಕೆಲವೇ ದಿನಗಳಲ್ಲಿ ಅವರು ಮತ್ತೆ ರಾಜಕೀಯ ಚಟುವಟಿಕೆಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ. “ಇದು ಸಾಮಾನ್ಯ ಹಾಗೂ ಸಣ್ಣ ಪ್ರಕ್ರಿಯೆ. ಪಿತಾಜಿಯ ಆರೋಗ್ಯ ಸ್ಥಿರವಾಗಿದೆ. ನಿಮ್ಮೆಲ್ಲರ ಕಾಳಜಿ ಮತ್ತು ಬೆಂಬಲಕ್ಕೆ ಧನ್ಯವಾದಗಳು,” ಎಂದು ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಯೋಸಹಜ ಸಮಸ್ಯೆ ಉಸಿರಾಟದ ತೊಂದರೆ ಉಂಟಾಗಿತ್ತು. ಇದರಿಂದಾಗಿ ವೈದ್ಯರು ಪೇಸ್ಮೇಕರ್ ಅಳವಡಿಸಲು ಸಲಹೆ ನೀಡಿದ್ದರು. ಪೇಸ್ಮೇಕರ್ನ ಬಳಕೆಯಿಂದ ಹೃದಯದ ಬಡಿತ ನಿಯಂತ್ರಣಕ್ಕೆ ತರಲಾಗುತ್ತದೆ, ಪೂರಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಂಗಳವಾರದವರೆಗೆ ಖರ್ಗೆಯವರು ಎಂದಿನಂತೆ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಬಳಿಕ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.