ಚಿತ್ರದುರ್ಗ : ದಲಿತ ಕೋಮಿಗೆ ಸೇರಿದ ಹತ್ತೊಂಬತ್ತು ವರ್ಷದ ವಿದ್ಯಾರ್ಥಿನಿ ವರ್ಷಿತಾಳನ್ನು ಕೊಲೆಗೈದು ಸುಟ್ಟುಹಾಕಿರುವುದನ್ನು ವಿರೋಧಿಸಿ ಎಬಿವಿಪಿ, ವಿವಿಧ ಸಂಘಟನೆಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು.
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾಳ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಕೆಳಗೋಟೆಯ ಚೇತನ್ಕುಮಾರ್ ಎಂಬುವನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಹತ್ಯೆಗೀಡಾಗಿರುವ ವರ್ಷಿತಾಳ ಪೋಷಕರು ಹಾಗೂ ಕೋವೇರಹಟ್ಟಿ ಗ್ರಾಮಸ್ಥರು, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸಮೀಪ ಎರಡು ಗಂಟೆಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ್ದರಿಂದ ಒನಕೆ ಓಬವ್ವ ವೃತ್ತ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಾಗೂ ರೋಟರಿ ಶಾಲೆಯ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚನೆಯುಂಟಾಯಿತು.
ಕರುನಾಡ ವಿಜಯಸೇನೆ, ಭಾರತೀಯ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ, ಅಂಬೇಡ್ಕರ್ ಸೇವಾ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಹತ್ಯೆಯ ಹಿಂದೆ ಯಾರ್ಯಾರ ಕೈವಾಡವಿದೆ ಎನ್ನುವುದನ್ನು ಪತ್ತೆ ಹಚ್ಚಿ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.
ಭಾರತೀಯ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಬೀರಾವರ ಮಾತನಾಡಿ ಹತ್ಯೆಗೀಡಾದ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದು ಕೋಟಿ ರೂ.ಪರಿಹಾರ ಘೋಷಿಸಿ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು. ಬರ್ಬರವಾಗಿ ಹತ್ಯೆಗೈದರನ್ನು ಗಲ್ಲು ಶಿಕ್ಷೆಗೊಳಪಡಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
ಒನಕೆ ಓಬವ್ವ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಗಿ ಪೊಲೀಸ್ ಭದ್ರತೆಯಿತ್ತು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳು ಪ್ರಮುಖರು ಪ್ರತಿಭಟನೆಯಲ್ಲಿದ್ದರು.