ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಮುಂದಿನ ಒಂದು ವಾರ ಭಾರಿ ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆ ಹೊರತಾಗಿ ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಬುಧವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆಯ ಕೆಲವೆಡೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಯಚೂರು, ಕೊಪ್ಪಳ ಜಿಲ್ಲೆಯ ಕೆಲವೆಡೆ 30 ರಿಂದ 40 ಕಿ.ಮೀ. ವೇಗದ ಗಾಳಿ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಲೆಯ ಕೆಲವೆಡೆ ಬಿರುಗಾಳಿ ಸಹಿತ ಮಳೆ ಆಗುವ ಸಂಭವ ಇದೆ.
ಚಾಮರಾಜನಗರ, ರಾಮನಗರ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ. ಮೇ 24 ರಿಂದ ರಾಜ್ಯಾದ್ಯಂತ ಗಾಳಿಯ ತೀವ್ರತೆ ಕಡಿಮೆಯಾಗಿ ಕೆಳವೆಡೆ ಮಳೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.































