ರಾಜ್ಯದಲ್ಲಿ ವರುಣಾರ್ಭಟ ಮತ್ತಷ್ಟು ಹೆಚ್ಚಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಈಗಾಗಲೇ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಆರೇಂಝ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರೌರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೇ. 24ರ ವರೆಗೆ ಗುಡುಗು ಮಿಂಚು ಸಮೇತವಾಗಿ ಮಳೆ ಆಗುವ ಹೆಚ್ಚಿನ ಸಾಧ್ಯತೆಗಳಿವೆ. ಕರಾವಳಿ ಭಾಗಗಳಲ್ಲಿ ಪ್ರತಿ ಗಂಟೆಗೆ 55 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯುವ ವೇಳೆ ಮುನ್ನೆಚ್ಚರಿಕೆ ವಹಿಸಬೇಕು. ಹವಾಮಾನ ಮುನ್ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದ್ದಾರೆ.